ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್‌ ; 15ಕ್ಕೂ ಹೆಚ್ಚು ಮಕ್ಕಳು ಅಪಾಯದಿಂದ ಪಾರು, ರಕ್ಷಣೆಗೆ ಓಡಿ ಬಂದ ಸ್ಥಳೀಯರು

11-08-26 03:08 pm       HK News Staffer   ಕರಾವಳಿ

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಬಸ್‌ನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಮಕ್ಕಳು ಸುರಕ್ಷಿತವಾಗಿ ಪಾರಾಗಿದ್ದಾರೆ.

ವಿಟ್ಲ, ಆಗಸ್ಟ್ 11: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಸಮೀಪದ ಕುಂಟುಕುಡೇಲು ಎಂಬಲ್ಲಿ ನಡೆದಿದೆ. ಬಸ್‌ನಲ್ಲಿ 15ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಮಕ್ಕಳು ಸುರಕ್ಷಿತವಾಗಿ ಪಾರಾಗಿದ್ದಾರೆ.

ವಿದ್ಯಾರ್ಥಿಗಳನ್ನು ಕರೆದುಕೊಂಡು ಬಸ್ ಶಾಲೆಯತ್ತ ತೆರಳುತ್ತಿತ್ತು. ಕುಂಟುಕುಡೇಲು ಇಳಿಜಾರಿನ ರಸ್ತೆಯಲ್ಲಿ ಬಸ್‌ ಸಾಗುತ್ತಿದ್ದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ನೇರವಾಗಿ ರಸ್ತೆ ಬಿಟ್ಟು ಕೆಳಭಾಗಕ್ಕೆ ಚಲಿಸಿ, ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಸಂಪೂರ್ಣವಾಗಿ ತುಂಡಾಗಿ ಬಸ್‌ನ ಮೇಲೆಯೇ ಬಿದ್ದಿದೆ. ಘಟನೆಯಿಂದ ಬಸ್ಸಿನ ಮುಂಭಾಗ ಜಖಂಗೊಂಡಿದೆ. ಆದರೆ, ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಶಾಲಾ ಮಕ್ಕಳು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ವಿದ್ಯುತ್ ಕಂಬ ಬಸ್‌ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಯಾವುದೇ ಪ್ರಾಣಹಾನಿ ಸಂಭವಿಸದೆ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ಬಸ್ಸಿನಲ್ಲಿದ್ದ ಮಕ್ಕಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ಬಳಿಕ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಇಳಿಜಾರಿನ ರಸ್ತೆಯಲ್ಲಿ ಬಸ್‌ಗೆ ತಾಂತ್ರಿಕ ದೋಷ ಉಂಟಾದ ಪರಿಣಾಮವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.