ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ ಬಟ್ಟೆ ಕಳವು ; 35 ವರ್ಷದ ವ್ಯಕ್ತಿ ಬಂಧನ

09-09-26 07:45 pm       HK News Staffer   ಕ್ರೈಂ

ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪದ ಮೇಲೆ ಬೆಳ್ಳಾರೆ ಪೊಲೀಸರು 35 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಸುಳ್ಯ, ಸೆ.9: ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ ಆರೋಪದ ಮೇಲೆ ಬೆಳ್ಳಾರೆ ಪೊಲೀಸರು 35 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರು ತಾಲೂಕಿನ ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಎಂದು ಗುರುತಿಸಲಾಗಿದೆ.

ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ವಾರ್ಡನ್ ನೀಡಿದ ದೂರಿನ ಪ್ರಕಾರ, ಸೆಪ್ಟೆಂಬರ್ 2ರ ಬೆಳಗ್ಗೆ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯರು ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ.

ನಂತರ ವಾರ್ಡನ್ ಹಾಸ್ಟೆಲ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಸೆಪ್ಟೆಂಬರ್ 2ರ ಮುಂಜಾನೆ ಅಪರಿಚಿತ ವ್ಯಕ್ತಿಯೊಬ್ಬ ಹಾಸ್ಟೆಲ್ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಕೆಲವು ಬಟ್ಟೆಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ನೀಡಲಾದ ದೂರಿನ ಆಧಾರದ ಮೇಲೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ತನಿಖೆ ಮುಂದುವರಿಸಿದ ಪೊಲೀಸರು ಸೆಪ್ಟೆಂಬರ್ 7ರಂದು ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ಆತನನ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.