ವಿಟ್ಲದಲ್ಲಿ ಪತ್ನಿಯನ್ನು ಹತ್ಯೆಗೈದು ಹೃದಯಾಘಾತದ ಕತೆಕಟ್ಟಿದ್ದ ಪತಿರಾಯ ; ಆರೋಪಿಗೆ 5 ವರ್ಷಗಳ ಶಿಕ್ಷೆ ವಿಧಿಸಿದ ಮಂಗಳೂರಿನ ಕೋರ್ಟ್

27-11-26 03:14 pm       HK News Staffer   ಕ್ರೈಂ

ಪತ್ನಿಯನ್ನು ಹತ್ಯೆಗೈದು, ಬಳಿಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಸ್ಥಳೀಯರನ್ನು ನಂಬಿಸಲು ಯತ್ನಿಸಿದ್ದ ಪತಿರಾಯನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ವಿಟ್ಲದ ಪುಣಚ ನಿವಾಸಿ ಸಂಜೀವ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ.

ಮಂಗಳೂರು, ನ.27: ಪತ್ನಿಯನ್ನು ಹತ್ಯೆಗೈದು, ಬಳಿಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಸ್ಥಳೀಯರನ್ನು ನಂಬಿಸಲು ಯತ್ನಿಸಿದ್ದ ಪತಿರಾಯನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ. ವಿಟ್ಲದ ಪುಣಚ ನಿವಾಸಿ ಸಂಜೀವ ನಾಯ್ಕ್ ಶಿಕ್ಷೆಗೊಳಗಾದ ವ್ಯಕ್ತಿ. 

2024ರ ಡಿಸೆಂಬರ್ 11ರಂದು ಸಂಜೀವ ನಾಯ್ಕ್ ತನ್ನ ಪತ್ನಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದು ಬಳಿಕ ಕೃತ್ಯವನ್ನು ಮರೆಮಾಚಲು ‘‘ಪತ್ನಿಗೆ ಹೃದಯಾಘಾತವಾಗಿದೆ’’ ಎಂದು ನೆರೆಮನೆಯವರಿಗೆ ಸುಳ್ಳು ಹೇಳಿ ಆಸ್ಪತ್ರೆಗೆ ದಾಖಲಿಸಿದ್ದ. ಆಸ್ಪತ್ರೆಯಲ್ಲಿ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು ಆಕೆ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದರು. ಆದರೆ, ಮೃತದೇಹದ ಮೇಲಿದ್ದ ಗಾಯಗಳನ್ನು ಗಮನಿಸಿದ ವೈದ್ಯರಿಗೆ ಅನುಮಾನ ಮೂಡಿದ್ದು, ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಟ್ಲ ಠಾಣೆಯಲ್ಲಿ ಸಂಶಯಾಸ್ಪದ ಮರಣ ಪ್ರಕರಣ ದಾಖಲಾಗಿತ್ತು. ಪೊಲೀಸರ ವಿಚಾರಣೆ ವೇಳೆ ಆರೋಪಿ ಪತಿ ತಾನೇ ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದ.

ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ನಿರೀಕ್ಷಕ ನಾಗರಾಜ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್, ಅಪರಾಧಿಗೆ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 105 (ಭಾಗ 2) ರ ಅಡಿಯಲ್ಲಿ 5 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳು ಜೈಲು ಶಿಕ್ಷೆ ಅನುಭವಿಸುವಂತೆ ಆದೇಶಿಸಿದ್ದಾರೆ. ಇದರೊಂದಿಗೆ ಸಾಕ್ಷ್ಯ ನಾಶ ಮತ್ತು ಸುಳ್ಳು ಮಾಹಿತಿ ನೀಡಿದ (ಸೆಕ್ಷನ್ 240) ಅಪರಾಧಕ್ಕಾಗಿ 6 ತಿಂಗಳು ಜೈಲು ಶಿಕ್ಷೆಯನ್ನೂ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯ್ಕ್ ವಾದ ಮಂಡಿಸಿದ್ದರು.