ಬೆಂಗಳೂರು ಉಗ್ರರ ಕೇಂದ್ರ ; ತೇಜಸ್ವಿ ಹೇಳಿಕೆಗೆ ಎಚ್ಡಿಕೆ ಕಿಡಿ, ಕ್ಷಮೆ ಯಾಚಿಸಲು ಆಗ್ರಹ

29-09-20 01:35 pm       Bangalore Correspondent   ಕರ್ನಾಟಕ

ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಬೆಂಗಳೂರು, ಸೆಪ್ಟಂಬರ್ 29: ಬೆಂಗಳೂರು ಉಗ್ರರ ಸ್ವರ್ಗವಾಗಿದೆ ಎಂಬ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರವಾಗಿ ಟೀಕಿಸಿದ್ದಾರೆ. 'ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಕೆಲ ಮಂದಿ ಡಿಜೆ ಹಳ್ಳಿ ಘಟನೆ ನಂತರ ಸಿಕ್ಕಿಬಿದ್ದಿದ್ದರು. ಹೀಗಾಗಿ ನಮ್ಮ ಟೀಕೆ ಉಗ್ರರ ವಿರುದ್ಧ ಇರಬೇಕು. ಆದರೆ ಕೋಟ್ಯಂತರ ಜನರಿಗೆ ಅನ್ನ, ಆಶ್ರಯ, ಜೀವನ ನೀಡುತ್ತಿರುವ ತಾಯಿಯಂಥ ಊರಿನ ಬಗ್ಗೆ ಅಲ್ಲ. ಬೆಂಗಳೂರಿನಲ್ಲಿ ಉಗ್ರರು ಸಿಕ್ಕಿಬಿದ್ದ ಮಾತ್ರಕ್ಕೆ ಬೆಂಗಳೂರು ಅವರದ್ದಲ್ಲ. ಬೆಂಗಳೂರು ನಮ್ಮದು' ಎಂದು ಟ್ವೀಟ್ ಮೂಲಕ ಟೀಕಿಸಿದ್ದಾರೆ. 

ಬೆಂಗಳೂರು ಬಿಬಿಎಂಪಿ, 28 ವಿಧಾನಸಭೆ ಕ್ಷೇತ್ರ, ನಾಲ್ಕು ಲೋಕಸಭೆ ಕ್ಷೇತ್ರ ಮಾತ್ರವಲ್ಲ. ಬೆಂಗಳೂರು ನಮ್ಮೆಲ್ಲರ ಹೆಮ್ಮೆ. ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಈ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ. ಈ ಹೇಳಿಕೆ ಸಂಬಂಧ ಬಿಜೆಪಿ ಸಂಬಂಧಿಸಿದವರಿಂದ ಕ್ಷಮೆ ಕೇಳಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. 

ಕೆಂಪೇಗೌಡರು ಬಲಿದಾನಗಳ ಮೂಲಕ ನಿರ್ಮಿಸಿದ ಬೆಂಗಳೂರು ಈಗಾಗ್ಲೇ ಜಗದ್ವಿಖ್ಯಾತಿ ಗಳಿಸಿದೆ. ದೇಶದ ಬೇರೆಲ್ಲ ನಗರಗಳಿಗಿಂತ ವೇಗವಾಗಿ ಬೆಳೆಯುತ್ತದೆ. ಇದನ್ನು ಸಹಿಸದ ಉತ್ತರ ಭಾರತೀಯ ರಾಜಕೀಯ ಲಾಬಿಯ ಷಡ್ಯಂತ್ರದ ಭಾಗವೇ ಈ ಹೇಳಿಕೆ ಎಂಬ ಅನುಮಾನ ಮೂಡುತ್ತಿದೆ. ಯಾಕೆಂದರೆ ಕೆಲವರಿಗೆ ತಾಯ್ನಾಡಿನ ಗೌರವಕ್ಕಿಂತ ಉತ್ತರದ ವ್ಯಾಮೋಹ ಅಧಿಕ ! ಎನ್ನುವ ಮೂಲಕ ಯುವಮೋರ್ಚಾ ಅಧ್ಯಕ್ಷರಾಗಿ ನೇಮಕವಾದೊಡನೆ ಇಂತಹ ಹೇಳಿಕೆ ಬಂದಿರುವ ನೆಲೆಯಲ್ಲಿ ಪರೋಕ್ಷವಾಗಿ ಟೀಕಿಸಿದ್ದಾರೆ.

Join our WhatsApp group for latest news updates (2)