ಮತದಾರರ ಖಾಸಗಿ ಮಾಹಿತಿ ಸಂಗ್ರಹ ಆರೋಪ ; ಚಿಲುಮೆ ಸಂಸ್ಥೆ ಕಪ್ಪುಪಟ್ಟಿಗೆ ಸೇರಿಸಿದ ಬಿಬಿಎಂಪಿ 

28-12-22 04:37 pm       Bangalore Correspondent   ಕರ್ನಾಟಕ

ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳವುಗೈದ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಮಾಡಿದೆ. 

ಬೆಂಗಳೂರು, ಡಿ.28: ಮತದಾರರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಮಾಹಿತಿ ಕಳವುಗೈದ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸಿ ಬಿಬಿಎಂಪಿ ಆದೇಶ ಮಾಡಿದೆ. 

ಮತದಾನದ ಬಗ್ಗೆ ಜಾಗೃತಿಗಾಗಿ ಬಿಬಿಎಂಪಿ ನೀಡಿದ್ದ ಒಪ್ಪಿಗೆಯನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ. ಸದ್ಯ ರಾಜ್ಯ ಚುನಾವಣಾ ಆಯೋಗ ಚಿಲುಮೆ ಸಂಸ್ಥೆಯ ವಿರುದ್ದ ತನಿಖೆ ನಡೆಸುತ್ತಿದೆ. ಚಿಲುಮೆ ಸಂಸ್ಥೆ ಕಪ್ಪು ಪಟ್ಟಿಗೆ ಸೇರಿದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ಕಾರ್ಯಕ್ರಮ ಹಾಗೂ ಟೆಂಡರ್​ಗಳನ್ನು ಸಂಸ್ಥೆಗೆ ನೀಡದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. 

ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಸಂಸ್ಥೆಯ ವಿರುದ್ಧ ಹಲಸೂರು ಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಚಿಲುಮೆ ಶೈಕ್ಷಣಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಅನುಮತಿ ಸಹಿತ ಗುತ್ತಿಗೆಯನ್ನು ಬಿಬಿಎಂಪಿ ನೀಡಿತ್ತು. 28 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಜೋಡಣೆಯನ್ನು ವಿಎಚ್ಎ(ವೋಟರ್ ಹೆಲ್ಪ್ ಲೈನ್ ಆ್ಯಪ್) ಮೂಲಕ ಮಾಡಲು ಮತ್ತು ಮತದಾರರಲ್ಲಿ ಅರಿವು ಮೂಡಿಸಲು ಅನುಮತಿ ನೀಡಲಾಗಿತ್ತು. ಆದರೆ ಖಾಸಗಿ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ ಎಂಬ ಆರೋಪದ ಬಗ್ಗೆ ಪೊಲೀಸ್ ದೂರು ನೀಡಲಾಗಿತ್ತು.

Bangalore Chilume Social Service Society listed to black list for misuse of Voters list.