ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಎಡಿಜಿಪಿ ಅಲೋಕ್‌ ಕುಮಾರ್‌ 

21-03-23 07:25 pm       Bangalore Correspondent   ಕರ್ನಾಟಕ

ಭ್ರಷ್ಟಾಚಾರ ಆರೋಪದಡಿ ತಮ್ಮ ವಿರುದ್ಧ ರೌಡಿ ಶೀಟರ್ ಫೈಟರ್ ರವಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಬೆಂಗಳೂರು, ಮಾ.21 :  ಭ್ರಷ್ಟಾಚಾರ ಆರೋಪದಡಿ ತಮ್ಮ ವಿರುದ್ಧ ರೌಡಿ ಶೀಟರ್ ಫೈಟರ್ ರವಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಅಲೋಕ್‌ ಕುಮಾರ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಕೆ. ನಟರಾಜನ್‌ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಫೈಟರ್‌ ರವಿಗೆ ನೋಟಿಸ್‌ ಜಾರಿ ಮಾಡಿದೆ. ಅಲೋಕ್‌ ಕುಮಾರ್ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಂದೇಶ್‌ ಚೌಟ, ಅರ್ಜಿದಾರರ ವಿರುದ್ಧದ ಆರೋಪಕ್ಕೆ ಯಾವುದೇ ಸಾಕ್ಷ್ಯಗಳು ಇಲ್ಲ. ತನಿಖಾಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯಲ್ಲಿ ʼಬಿʼ ರಿಪೋರ್ಟ್ ಎಂದು ನಮೂದಾಗಿದೆ. ಆದರೆ, ವಿಶೇಷ ನ್ಯಾಯಾಲಯವು ಕೇವಲ ಫಿರ್ಯಾದಿಯ ದೂರು ಮತ್ತು ಪ್ರತಿಭಟನಾ ಅರ್ಜಿಯನ್ನು ಆಧರಿಸಿ ಸಂಜ್ಞೆಯ ಅಪರಾಧದಡಿ ವಿಚಾರಣೆಗೆ ಮುಂದಾಗಿದೆ. ಆದ್ದರಿಂದ, ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿದರು.

ವಾದ ಆಲಿಸಿದ ಪೀಠವು ಪ್ರತಿವಾದಿ ಬಿ.ಎಂ‌ ಮಲ್ಲಿಕಾರ್ಜುನ ಅಲಿಯಾಸ್‌ ರವಿ ಯಾನೆ ಫೈಟರ್‌ ರವಿ (44) ಬಿ‌ನ್ ಎನ್‌ ಮಲ್ಲಯ್ಯಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ. ಫೈಟರ್‌ ರವಿ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿ‌ಯಲ್ಲಿ 2014ರಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಕೈಬಿಡಲು ಆಗಿನ ಉತ್ತರ ವಲಯದ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ರೂ. 1 ಕೋಟಿ ಲಂಚಕ್ಕೆ ಬೇಡಿಕೆ ಇರಿಸಿದ್ದರು ಎಂದು ಆರೋಪಿಸಲಾಗಿತ್ತು.

ಈ ಕುರಿತಂತೆ ರವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರನ್ನು ಆಧರಿಸಿ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹ ಕಾಯಿದೆ ಕಲಂ 7, 13 (ಡಿ) ಮತ್ತು 13 (2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು. ತನಿಖೆಯ ನಂತರ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ, ಲೋಕಾಯುಕ್ತ ವಿಶೇಷ ನ್ಯಾಯಾಲಯ ’ಬಿ’ ರಿಪೋರ್ಟ್‌ ಅನ್ನು ತಿರಸ್ಕರಿಸಿತ್ತು. ಅಲ್ಲದೆ, ಅಲೋಕ್ ಕುಮಾರ್, ಎಸಿಪಿ ದಾನೇಶ್ ರಾವ್ ಮತ್ತಿತರರ ವಿರುದ್ಧದ ಆರೋಪಗಳನ್ನು ಸಂಜ್ಞೆಯ ಅಪರಾಧ ಎಂದು ತೀರ್ಮಾನಿಸಿ ಫೈಟರ್ ರವಿಯ ಸ್ವಯಂ ಹೇಳಿಕೆ ದಾಖಲಿಸುವ ಕ್ರಮಕ್ಕೆ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಅಲೋಕ್ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ADGP Alok Kumar moves High Court seeking cancellation of fighter Ravi's criminal case.