ವ್ಯಾಪಕ ಮಳೆ: ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

07-08-20 10:29 am       Headline Karnataka News Network   ಕರ್ನಾಟಕ

ರಾಜ್ಯಾದ್ಯಂತ ಇಂದು ವ್ಯಾಪಕ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಇವತ್ತು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ನಾಳೆಯಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಬೆಂಗಳೂರು(ಆ.07): ರಾಜ್ಯಾದ್ಯಂತ ಇಂದು ವ್ಯಾಪಕ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಲ್ಲಿ ಇವತ್ತು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ನಾಳೆಯಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಇನ್ನು, ದಕ್ಷಿಣ ಒಳನಾಡಿನಲ್ಲಿ ಮಾನ್ಸೂನ್ ಚುರುಕು ಪಡೆದುಕೊಂಡಿದ್ದು, ಮಳೆರಾಯನ ಆರ್ಭಟ ಜೋರಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್​ 7ರಿಂದ 10ರವರೆಗೆ ವ್ಯಾಪಕ ಮಳೆಯಾಗಲಿದೆ. ಆಗಸ್ಟ್​ 11ರಂದು ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಲೆನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 7 ಅಂದರೆ ಇಂದು ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ತೀರದಲ್ಲಿ ಗಾಳಿಯ ವೇಗ ಹೆಚ್ಚಿರುವ ಹಿನ್ನಲೆ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 7 ರಿಂದ 11 ರವರೆಗೆ ವ್ಯಾಪಕ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 7 ರಿಂದ 10 ರವರೆಗೆ ಭಾರೀ ಮಳೆ ನಿರೀಕ್ಷೆ ಇರುವುದರಿಂದ ಆರೆಂಜ್ ಅಲರ್ಟ್ ನೀಡಲಾಗಿದೆ.  ಆದರೆ ಆಗಸ್ಟ್ 11 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 7, 10, 11 ರಂದು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಆಗಸ್ಟ್ 8-9 ರಂದು ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕರಾದ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ. ಹೀಗಾಗಿ ರಾಜಧಾನಿಯ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.