DK Shivakumar, H D Kumaraswamy: ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆ ಶಿವಕುಮಾರ್  ಗೆ, ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ, ರಾಜೀನಾಮೆ ಕೊಡ್ಬೇಕು ಎಂದ ಕುಮಾರಸ್ವಾಮಿ

21-05-24 10:08 pm       Bangalore Correspondent   ಕರ್ನಾಟಕ

ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು  ಕುಮಾರಸ್ವಾಮಿ ಒತ್ತಾಯಿಸಿದರು.

ಬೆಂಗಳೂರು, ಮೇ 21: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು  ಕುಮಾರಸ್ವಾಮಿ ಒತ್ತಾಯಿಸಿದರು.

ಬೆಂಗಳೂರಿನ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ. ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು

ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು ಈ ವಿಡಿಯೋಗಳನ್ನು ತಂದು ಕೊಟ್ಟಿದ್ದೆ ಡಿಕೆಶಿಗೆ. ಆ ಸಂದರ್ಭದಲ್ಲಿ ಅವರ ಪಕ್ಷದ ಹಾಸನದ ಅಭ್ಯರ್ಥಿಯೂ ಇದ್ದರು. ಪ್ರಕರಣದಲ್ಲಿ ಇಷ್ಟೆಲ್ಲ ಭಾಗಿಯಾದ ಮೇಲೂ ಅವರನ್ನು ಸಂಪುಟದಲ್ಲಿ ಮುಂದುವರಿಸುವುದು ಸರಿಯಲ್ಲ. ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟ. ಸರ್ಕಾರ ಇಂತಹ ತಪ್ಪಿತಸ್ಥರಿಗೆ ರಕ್ಷಣೆ ಕೊಡಬಾರದು, ದುರಂತಕ್ಕೆ ಸಿಎಂ ಸೇರಿದಂತೆ ಇಡಿ ಸರ್ಕಾರವೇ ಅವರ ರಕ್ಷಣೆಗೆ ನಿಂತಿದೆ ಎಂದು ಕುಮಾರಸ್ವಾಮಿ ಅವರು ದೂರಿದರು.

ರಾಜಕೀಯ ಸ್ವಾರ್ಥಕ್ಕಾಗಿ, ವಾಮಮಾರ್ಗದಲ್ಲಿ ಚುನಾವಣೆ ಗೆಲ್ಲಬೇಕೆಂಬ ಕಾರಣಕ್ಕೆ ಡಿಕೆಶಿ ಹೂಡಿರುವ ಸಂಚು ಏನು ಎಂಬುದು ಜಗಜ್ಜಾಹೀರಾಗಿದೆ. ಇಡೀ ದೇಶವೇ ಆ ವ್ಯಕ್ತಿಯ ಹೀನ ಕೆಲಸದ ಬಗ್ಗೆ ಮಾತನಾಡುತ್ತಿದೆ. ನೊಂದ ಮಹಿಳೆಯರ ಜೀವನಕ್ಕೆ ಕೊಳ್ಳಿ ಇಟ್ಟ ಈ ವ್ಯಕ್ತಿಯನ್ನು ರಕ್ಷಣೆ ಮಾಡುವ ಕೆಲಸ ಮಾಡಲಾಗುತ್ತಿದೆ. ಇಂದು ವೇಳೆ ಸರ್ಕಾರ ಈ ಕಳಂಕಿತ ಸಚಿವನನ್ನು ರಕ್ಷಣೆ ಮಾಡಿದರೆ ಭಾರೀ ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ದೇವರಾಜೇಗೌಡ, ಶಿವರಾಮೇಗೌಡ ನಡುವಿನ ಮೊಬೈಲ್ ಸಂಭಾಷಣೆ ಹೊರಬಂದಾಗಿನಿಂದ ಡಿಕೆಶಿ ಮಾತನಾಡುತ್ತಿಲ್ಲ. ಅದಕ್ಕೆ ನಾನು ಕೇಳಿದ್ದು, ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು. ಇದಕ್ಕೆ ನಾವು ಕಾನೂನು ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇವೆ. ನಾನು ಮೊದಲಿನಿಂದಲೂ ಹೇಳಿದ್ದೇನೆ, ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗಬೇಕು ಎಂದಿದ್ದೇನೆ.

ಪೆನ್ ಡ್ರೈವ್ ಸೃಷ್ಟಿ ಮಾಡಿ ಅದನ್ನೆಲ್ಲಾ ಹೊರಗೆ ತಂದು ಮಹಿಳೆಯರಿಗೆ ಕಂಟಕರಾದವರೇ ಇವತ್ತು ನರೇಂದ್ರ ಮೋದಿ, ಅಮಿತ್ ಶಾ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ. ಎನ್ ಡಿಎ ಮೈತ್ರಿಕೂಟದಿಂದ ಜೆಡಿಎಸ್ ಪಕ್ಷವನ್ನು ಯಾವಾಗ ಹೊರಕ್ಕೆ ಹಾಕುತ್ತೀರಿ ಎಂದು ಕೇಳುತ್ತಾರೆ. ಆಡಿಯೋ ಸಂಭಾಷಣೆಯಲ್ಲಿ ಈ ಅಂಶವೂ ಇದೆ. ಅಲ್ಲಿಗೆ ಇವರ ದುರುದ್ದೇಶ ಏನು ಎನ್ನುವುದು ಅರ್ಥ ಆಯಿತಲ್ಲವೇ ಎಂದು ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

Pen drive was first handed over to DK Shivakumar, he must resign says Hd Kumaraswamy. Entire nation has come to know how cheap is DK Shivakumar he slammed