ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರ ದುರ್ಮರಣ

05-12-20 11:37 am       Headline Karnataka News Network   ಕರ್ನಾಟಕ

ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರಾಣಿಬೆನ್ನೂರಿನಲ್ಲಿ ನಡೆದಿದೆ.

ಹಾವೇರಿ,ಡಿ.5: ಲಾರಿಗೆ ವ್ಯಾಗನಾರ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೊರವಲಯದಲ್ಲಿರೋ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಮೃತರನ್ನು ಕೆ.ಎನ್.ಹನುಮಂತಪ್ಪ ನಿಂಗಪ್ಪ (60), ಗೀತಮ್ಮ (50) ಮತ್ತು ಶಿವಾನಿ (11) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರೆಲ್ಲರೂ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕುಂಬಳೂರು ಗ್ರಾಮದವರು ಎನ್ನಲಾಗಿದೆ.

ಹುಬ್ಬಳ್ಳಿಯಲ್ಲಿ ಮದುವೆ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಎಸ್‍ಐ ಮಂಜುನಾಥ್ ಮತ್ತು ಸಿಪಿಐ ಭಾಗ್ಯವತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.