ಡಿ.ಜೆ ಹಳ್ಳಿ ಗಲಭೆ ಪ್ರಕರಣ: ಕಠಿಣ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ

12-08-20 05:19 am       Headline Karnataka News Network   ಕರ್ನಾಟಕ

ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಮತ್ತು ಹಿಂಸಾಚಾರದ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಂಡಿಸಿದ್ದಾರೆ.

ಬೆಂಗಳೂರು, ಆಗಸ್ಟ್ 12: ಬೆಂಗಳೂರಿನ ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದ ಗಲಭೆ ಮತ್ತು ಹಿಂಸಾಚಾರದ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖಂಡಿಸಿದ್ದಾರೆ. ಇಂತಹ ಪುಂಡಾಟಿಕೆಗಳನ್ನು ಸರ್ಕಾರ ಸಹಿಸುವುದಿಲ್ಲ. ಜನರು ಇಂತಹ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮ ಕಾಪಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಹಾಗೆಯೇ ಎಲ್ಲ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ದುಷ್ಕರ್ಮಿಗಳನ್ನು ನಿಯಂತ್ರಿಸಲು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪ್ರದೇಶಗಳಲ್ಲಿ ನಡೆದ ಗುಂಪು ಘರ್ಷಣೆ ಪ್ರಕರಣಗಳ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಗರದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಗಲಭೆಯ ಹಿಂದಿನ ಕಾರಣ, ನಡೆದ ಘಟನೆಗಳು ಹಾಗೂ ಮುಂದಿನ ಕ್ರಮಗಳ ಬಗ್ಗೆ ಅವರು ಚರ್ಚಿಸಲಿದ್ದಾರೆ.ಕೆ.ಜಿ. ಹಳ್ಳಿ & ಡಿ.ಜೆ. ಹಳ್ಳಿ ಗುಂಪು ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದು ತನಿಖೆಯ ಸ್ವರೂಪ ನಿರ್ಧರಿಸಲಿದ್ದಾರೆ.