ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ; 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

08-01-21 01:29 pm       Headline Karnataka News Network   ಕರ್ನಾಟಕ

ರಾಜ್ಯದಲ್ಲಿ ಇನ್ನೂ ಎರಡು ದಿನ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು, ಜನವರಿ 8: ರಾಜ್ಯದಲ್ಲಿ ಇನ್ನೂ ಎರಡು ದಿನ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಕುಳಿರ್ಗಾಳಿ ಮತ್ತಷ್ಟು ತೀವ್ರಗೊಂಡಿದೆ. ಇದರ ಪರಿಣಾಮ ಜ. 8 ಮತ್ತು 9ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆ ಸುರಿಯಲಿದೆ. ಒಟ್ಟು ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ. 64.5 ಮಿ.ಮೀ ಇಂದ 115.5 ಮಿ.ಮೀವರೆಗೂ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಅಲ್ಲಲ್ಲಿ ಮುಂದಿನ 48ಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಜನವರಿ 12ರವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯನ್ನು ನಿರೀಕ್ಷಿಸಲಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅದು ಮಾಹಿತಿ ನೀಡಿದೆ.

Karnataka Government has issued a yellow alert in various districts for the next two days.