ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾಲ್ಕರಲ್ಲೂ ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳಿಗೆ ಜಯ, ಆಡಳಿತಾರೂಢ ಕಾಂಗ್ರೆಸಿಗೆ ಮುಖಭಂಗ ! 

27-10-26 09:47 pm       HK News Desk   ಕರ್ನಾಟಕ

ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು ನಾಲ್ಕು ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಿದ್ದು ಆಡಳಿತಾರೂಢ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. 

ಬೆಂಗಳೂರು, ಅ.27 ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು ನಾಲ್ಕು ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಗೆಲುವು ಸಾಧಿಸಿದ್ದು ಆಡಳಿತಾರೂಢ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. 

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ -ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ. ಎಪಿ ರಂಗನಾಥ್ ಅವರು 10,810 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 9902 ಮತ ಪಡೆದಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ 7239, ಎರಡನೇ ಸುತ್ತಿನಲ್ಲಿ 7311 ಸೇರಿ 14,540 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಶರಣಪ್ಪ ಮತ್ತೂರ್ ಸೋಲುಂಡಿದ್ದಾರೆ.  

ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ- 2026ರ ಮತ ಎಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಒಟ್ಟು 14,001 ಮತಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಂಕನೂರ 6459 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರು 4394 ಮತಗಳನ್ನು ಪಡೆದಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಸಂಕನೂರ ಎಸ್.ವಿ ಅವರು 2206 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು ಗೆಲುವು ಖಾತ್ರಿ ಪಡಿಸಿದ್ದಾರೆ. ಆಗ್ನೇಯ ಪದವೀಧರರ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್ ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಹಿನ್ನಡೆಯಲ್ಲಿದ್ದಾರೆ. 

ಪಶ್ಚಿಮ ಪದವೀಧರರ ಕ್ಷೇತ್ರದ ಎಣಿಕೆ ಧಾರವಾಡದಲ್ಲಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಎಣಿಕೆ ಕಲಬುರಗಿಯಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದ ಮತ ಎಣಿಕೆ ಬೆಂಗಳೂರಲ್ಲಿ ನಡೆಯಿತು. ಅ.23ರಂದು ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆದಿತ್ತು.