ಅಕ್ಟೋಬರ್​​​ನಿಂದ ಡಿಗ್ರಿ ಕಾಲೇಜು ಓಪನ್ - ಡಿಸಿಎಂ ಅಶ್ವಥ್​​ ನಾರಾಯಣ್ ​​

26-08-20 04:56 pm       Bangalore Correspondent   ಕರ್ನಾಟಕ

ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಡಿಸಿಎಂ ಎಂದು ಅಶ್ವಥ್​​ ನಾರಾಯಣ ಪ್ರಕಟಿಸಿದ್ದಾರೆ.

ಬೆಂಗಳೂರು, ಆಗಸ್ಟ್ 26: ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್​​ಲೈನ್ ಮೂಲಕ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದೆ. ಅಕ್ಟೋಬರ್ ತಿಂಗಳಿನಿಂದ ನೇರ(ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್​​ ನಾರಾಯಣ ಪ್ರಕಟಿಸಿದರು.

ಬೆಂಗಳೂರಿನ ಸುಬ್ರಹ್ಮಣ್ಯ ನಗರದ ವಾರ್ಡ್ ಸಂಖ್ಯೆ 66ರಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ ಕೆಲ ಪದವಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಸರಕಾರವೂ ಮುಂದಿನ ತಿಂಗಳಿಂದ  ಆನ್​​ಲೈನ್ ಮೂಲಕವೇ ಎಲ್ಲ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರ್ಣ ಪ್ರಮಾಣದಲ್ಲಿ ಚಾಲನೆ ನೀಡಲು ನಿರ್ಧರಿಸಿದೆ ಎಂದರು.

ಜತೆಗೆ, ಅಕ್ಟೋಬರ್ ತಿಂಗಳಿಂದಲೇ ಎಲ್ಲ ಕಾಲೇಜುಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿಗಳು ಕೂಡ ತರಗತಿಗಳಿಗೆ ಹಾಜರಾಗಬೇಕಾಗುತ್ತದೆ ಎಂದರು.

ತರಗತಿಗಳನ್ನು ಆರಂಭಿಸುವ ಬಗ್ಗೆ ಈಗಾಗಲೇ ಯುಜಿಸಿ ಮಾರ್ಗಸೂಚಿಯಂತೆ ರಾಜ್ಯ ಸರಕಾರ ಎಲ್ಲ ರೀತಿಯ ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಕೇಂದ್ರ ಸರ್ಕಾರದ ಆದೇಶ ಬರುತ್ತಿದ್ದಂತೆಯೇ ಈ ನಿಟ್ಟಿನಲ್ಲಿ ರಾಜ್ಯವು ಕಾರ್ಯೋನ್ಮುಖವಾಗಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.