ಜೂನ್ 3 ಹಾಗೂ 4 ರಂದು ರಾಜ್ಯದಲ್ಲಿ ಭಾರಿ ಮಳೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

02-06-21 11:10 am       Headline Karnataka News Network   ಕರ್ನಾಟಕ

ರಾಜ್ಯದಲ್ಲಿ ಜೂನ್ 3 ಹಾಗೂ 4 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಜೂನ್ 02: ರಾಜ್ಯದಲ್ಲಿ ಜೂನ್ 3 ಹಾಗೂ 4 ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈರುತ್ಯ ಮುಂಗಾರು ಮಾರುತಗಳು ಜೂನ್ 3ರಂದು ಕೇರಳ ಕರಾವಳಿಗೆ ಅಪ್ಪಳಿಸಲಿದ್ದು, ರಾಜ್ಯಕ್ಕೆ ಜೂನ್‌ 5 ರಂದು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್‌, ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಇಂದಿನಿಂದ ಜೂನ್ 4ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಮಳೆಯಾಗುತ್ತಿದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಾಗೂ ಇನ್ನು ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಗಳಿವೆ.

ಈಗಾಗಲೇ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಹಲವೆಡೆ ಮಳೆಯಾಗಿದ್ದು, ನಾಗರಬಾವಿಯಲ್ಲಿ ತುಂತುರು ಮಳೆಯಾಗಿದೆ. ವಿದ್ಯಾರಣ್ಯಪುರದಲ್ಲಿ ಜೋರು ಮಳೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿ, ಲಾಲ್ ಬಾಗ್ ಸುತ್ತಲೂ ತುಂತುರು ಮಳೆಯಾಗಿದ್ದು, ಮಾರತ್ತಹಳ್ಳಿಯ ಕೆಲ ಭಾಗದಲ್ಲಿ ತುಂತುರು ಮಳೆ ಮುಂದುವರಿದಿದೆ.



ವಾಡಿಕೆಗಿಂತ ಹೆಚ್ಚು ಮಳೆ

ಈ ವರ್ಷ ಉತ್ತರಮತ್ತು ದಕ್ಷಿಣ ಭಾರತದಲ್ಲಿ ನೈಋತ್ಯ ಮುಂಗಾರು ಮಳೆ ವಾಡಿಕೆಯಂತೆ ಬರಲಿದ್ದು, ದೇಶದ ಮಧ್ಯ ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನೈಋತ್ಯ ಮುಂಗಾರು 2021ಕ್ಕೆ ಸಂಬಂಧಿಸಿದಂತೆ ಮುನ್ಸೂಚನೆಯ ಎರಡನೇ ಮಾಹಿತಿಯನ್ನು ಬಿಡುಗಡೆ ಮಾಡಿರುವ ಹವಾಮಾನ ಇಲಾಖೆಯ ಮಹಾ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಈ ವರ್ಷ ದೇಶದಲ್ಲಿ ಮುಂಗಾರು ಮಳೆ ವಾಡಿಕೆಯಂತೆ ಸುರಿಯಲಿದೆ ಎಂದಿದ್ದಾರೆ.



ಮಳೆಯ ಯೆಲ್ಲೋ ಅಲರ್ಟ್

ಉತ್ತರ ಕನ್ನಡ , ದಕ್ಷಿಣ ಕನ್ನಡ , ಉಡುಪಿ, ಬೀದರ್, ಗದಗ , ಬೆಂಗಳೂರು ನಗರ. ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಕೊಡಗು ಕೋಲಾರ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 4ರವರೆಗೆ ಹಳದಿ ಅಲರ್ಟ್​ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.



ಮುಂಗಾರು ಪ್ರವೇಶ

ಕರ್ನಾಟಕದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ ಆಗಿರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದು ಕರ್ನಾಟಕ ಮಾತ್ರವಲ್ಲದೆ ಕೇರಳ, ಗುಜರಾತ್, ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ಬೆಂಗಳೂರು ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.