ಭಾರತದಲ್ಲಿ 24,67,759 ಮಂದಿ ಕೊರೊನಾವೈರಸ್ ಸೋಕಿನಿಂದ ಗುಣಮುಖರಾಗಿದ್ದಾರೆ

26-08-20 12:20 pm       Headline Karnataka News Network   ದೇಶ - ವಿದೇಶ

ಭಾರತದಲ್ಲಿ ಒಟ್ಟು 3234475 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 24,67,759 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

ನವದೆಹಲಿ, ಆಗಸ್ಟ್.26: ಭಾರತದಲ್ಲಿ ಒಟ್ಟು 3234475 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 24,67,759 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,07,267 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕಿನ ಅಟ್ಟಹಾಸವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುಣಮುಖ ಪ್ರಕರಣಗಳು ಹೆಚ್ಚಾಗುವುತ್ತಿರುವುದು ಒಂದು ಕಡೆಯಾದರೆ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ.

ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 1059 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊರೊನಾವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆಯು 59449ಕ್ಕೆ ಏರಿಕೆಯಾಗಿದೆ. ಒಂದೇ ದಿನ 67151 ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 3234475ಕ್ಕೆ ಏರಿಕೆಯಾಗಿದೆ.

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,76,51,512 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 8,23,992 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ತಪಾಸಣೆಗೊಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ವಿಶ್ವದಲ್ಲಿ 2,40,58,358 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 8,23,510 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,66,08,068 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.