ಪ್ರಧಾನಿ ಮೋದಿ 70ನೇ ಹುಟ್ಟುಹಬ್ಬ - ರಾಹುಲ್, ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರಿಂದ ಶುಭಾಶಯ

17-09-20 10:31 am       Headline Karnataka News Network   ದೇಶ - ವಿದೇಶ

ಪ್ರಧಾನಿ ನರೇಂದ್ರ ಮೋದಿ 70ನೇ ಹುಟ್ಟುಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಹಲವು ವಿಶೇಷ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ.ಇದೇ ವೇಳೆ ಹಲವು ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ನವದೆಹಲಿ, ಸೆಪ್ಟಂಬರ್ 17: ಪ್ರಧಾನಿ ನರೇಂದ್ರ ಮೋದಿ 70ನೇ ಹುಟ್ಟುಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಹಲವು ವಿಶೇಷ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ. ಅವರ ಅಭಿಮಾನಿಗಳು ಹಾಗೂ ಬಿಜೆಪಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಸಹ ಹಮ್ಮಿಕೊಳ್ಳಲಾಗಿದೆ. ಇದೇ ವೇಳೆ ಹಲವು ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಇನ್ನು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಅವರು ಚುರುಕು ನಾಯಕತ್ವ, ದೃಢ ನಿರ್ಧಾರ, ನಿರ್ಣಾಯಕ ಕ್ರಮದಿಂದ ಭಾರತ ಸಾಕಷ್ಟು ಲಾಭ ಗಳಿಸಿದೆ. ಬಡವರು ಹಾಗೂ ನಿರ್ಗತಿಕರ ಸಬಲೀಕರಣಕ್ಕಾಗಿ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಅವರ ನಾಯಕತ್ವದಲ್ಲಿ ರಾಷ್ಟ್ರಕ್ಕೆ ಅಪಾರ ಪ್ರಯೋಜನವಾಗಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ. ಅಮಿತ್ ಅವರು ಭಾವನಾತ್ಮಕ ಸಾಲುಗಳನ್ನು ಬರೆದಿದ್ದು, ಸದೃಡ, ಸುರಕ್ಷಿತ ಹಾಗೂ ಸ್ವಾವಲಂಬಿ ಭಾರತದವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ತಮ್ಮ ಜೀವನದ ಪ್ರತಿ ಕ್ಷಣವನ್ನೂ ಮೀಸಲಿರಿಸಿದ್ದಾರೆ. ಅವರ ನಾಯಕತ್ವದಲ್ಲಿ ರಾಷ್ಟ್ರ ಸೇವೆ ಮಾಡುತ್ತಿರುವ ನಾನೇ ಅದೃಷ್ಟಶಾಲಿ. ಎಲ್ಲ ದೇಶವಾಸಿಗಳ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆರೋಗ್ಯ ದೀರ್ಘಾಯುಷ್ಯವನ್ನು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಶುಭಾಶಯ ತಿಳಿಸಿದ್ದು, ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಅಭಿಮಾನಪೂರ್ವಕ ಶುಭಕಾಮನೆಗಳು. ಆರೋಗ್ಯಪೂರ್ಣವಾಗಿ ಇನ್ನೂ ಬಹಳ ವರ್ಷಗಳ ಕಾಲ ತಮ್ಮ ರಾಷ್ಟ್ರ ಸೇವೆ ಹೀಗೆಯೇ ಮುಂದುವರಿಯುವಂತೆ ದೇವರು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಆತ್ಮೀಯ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷ ಲಭಿಸಲೆಂದು ಪ್ರಾರ್ಥಿಸುತ್ತೇನೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ಟ್ವೀಟ್‌ ಮಾಡಿದ್ದಾರೆ.

Join our WhatsApp group for latest news updates