Mangalore Rain, Orange Alert: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ ಘೋಷಣೆ  ; ಮುಂದಿನ 5 ದಿನ ವ್ಯಾಪಕ ಮಳೆ, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

04-07-23 01:12 pm       Mangalore Correspondent   ಕರಾವಳಿ

ಜೂನ್‌ ಕೈಕೊಟ್ಟಿದ್ದ ಮುಂಗಾರು ಜುಲೈನಲ್ಲಿ ಕೃಪೆ ತೋರುವ ಲಕ್ಷಣ ಕಾಣಿಸುತ್ತಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳೂರು, ಜುಲೈ 4: ಜೂನ್‌ ಕೈಕೊಟ್ಟಿದ್ದ ಮುಂಗಾರು ಜುಲೈನಲ್ಲಿ ಕೃಪೆ ತೋರುವ ಲಕ್ಷಣ ಕಾಣಿಸುತ್ತಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸದ್ಯ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಾತ್ರ ಭಾರಿ ಮಳೆಯಾಗುತ್ತಿದ್ದ ಕಳೆದ ಎರಡು-ಮೂರು ದಿನಗಳಿಂದ ಉಳಿದ ಜಿಲ್ಲೆಗಳಲ್ಲಿ ಕೂಡ ಮಳೆಯಾಗುತ್ತಿದ್ದು ಸಮಾಧಾನ ತಂದಿದೆ. ತುಮಕೂರು, ಬೆಂಗಳೂರು, ಹಾಸನ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಬೆಳಗಾವಿ, ಮೈಸೂರು ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ಜುಲೈ 8ರವರೆಗೂ ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. 3.5-3.8 ಎತ್ತರದ ಅಲೆಗಳು ಬರುವ ಸಾಧ್ಯತೆ ಇರುವುದರಿಂದ ಪ್ರವಾಸಿಗರು ಕೂಡ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಜೂನ್ 3ರಂದು ಉಡುಪಿಯಲ್ಲಿ 99.1 ಮಿ.ಮೀ ಮಳೆಯಾಗಿದೆ. ಉಳಿದಂತೆ ಬ್ರಹ್ಮಾವರ 100.1, ಕಾಪು 79, ಕುಂದಾಪುರ 64.5, ಬೈಂದೂರು 76.2, ಕಾರ್ಕಳ 76.4, ಹೆಬ್ರಿ 77.9 ಮಿಮೀ ಮಳೆಯಾಗಿದೆ. ಗೋಕರ್ಣ, ಹೊನ್ನಾವರ, ಮಾವಿನಕಾಡು, ಧರ್ಮಸ್ಥಳ, ಸುಬ್ರಹ್ಮಣ್ಯ, ಪಣಂಬೂರು, ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ ಕಾಲೇಜಿಗೆ ರಜೆ ;

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಜಿಲ್ಲೆಯ ಐದು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ. ಉಳಿದ ತಾಲೂಕಿನಲ್ಲಿ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಅಧಿಕಾರವನ್ನು ತಹಶೀಲ್ದಾರ್ ಗಳಿಗೆ ನೀಡಲಾಗಿದೆ.

ಇತರೆ ಜಿಲ್ಲೆಗಳಲ್ಲೂ ಉತ್ತಮ ಮಳೆ ರಾಜ್ಯದ ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಶಿವಮೊಗ್ಗ, ಸಾಗರ, ತೀರ್ಥಹಳ್ಳಿ, ಶಿರಸಿ, ಸಿದ್ಧಪುರ, ಆಗುಂಬೆ, ಕುದುರೆಮುಖ ಸೇರಿದಂತೆ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇನ್ನೂ ನಾಲ್ಕು ದಿನಗಳ ಕಾಲ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ, ದಕ್ಷಿಣ ಒಳನಾಡಿನಲ್ಲೂ ಮಳೆ ಮುನ್ಸೂಚನೆ ;

ಬರದ ಭೀತಿಯಲ್ಲಿದ್ದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಆರಂಭವಾಗಿದ್ದು ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಕೊಡಗು, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದಂತೆ ಉತ್ತರ ಒಳನಾಡಿನ ರಾಯಚೂರು, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಕೂಡ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

Heavy rains in Mangalore, Orange alert declared to Karavali districts, fishermen alerted not to enter sea for fishing. In view of the ‘orange alert’ issued in Karnataka’s Dakshina Kannada region, the deputy commissioner of Dakshina Kannada district has declared a holiday to students of anganwadi centres, primary and high school, pre-university, and government and private schools in Mangalore, Bantwal, Mulki, Moodbidri and Ullal on July 4. Orange alert in Dakshina Kannada has been sounded till July 6.