Mangalore Yakshagana, Jayaram Acharya; ಯಕ್ಷಗಾನ ರಂಗದ ಹಿರಿಯ ಕಲಾವಿದ, ಹಾಸ್ಯರಾಜ ಎಂದೇ ಖ್ಯಾತರಾಗಿದ್ದ ಬಂಟ್ವಾಳ ಜಯರಾಮ ಆಚಾರ್ಯ ನಿಧನ 

21-10-24 05:10 pm       Mangalore Correspondent   ಕರಾವಳಿ

ಯಕ್ಷಗಾನ ರಂಗದ ಹಿರಿಯ ಕಲಾವಿದ, ಹಾಸ್ಯರಾಜ ಎಂದೇ ಖ್ಯಾತರಾಗಿದ್ದ ಬಂಟ್ವಾಳ ಜಯರಾಮ ಆಚಾರ್ಯ (67) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 

ಮಂಗಳೂರು, ಅ.21: ಯಕ್ಷಗಾನ ರಂಗದ ಹಿರಿಯ ಕಲಾವಿದ, ಹಾಸ್ಯರಾಜ ಎಂದೇ ಖ್ಯಾತರಾಗಿದ್ದ ಬಂಟ್ವಾಳ ಜಯರಾಮ ಆಚಾರ್ಯ (67) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 

ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ.21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಸೋಮವಾರ ಮುಂಜಾನೆ ನಾಲ್ಕು ಗಂಟೆಗೆ ಹೃದಯಾಘಾತವಾಗಿದ್ದು ಕೂಡಲೇ ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲಪ್ರದವಾಗದೆ ಸಾವನ್ನಪ್ಪಿದ್ದಾರೆ. 1957 ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿ, ತಂದೆಯವರ ಪ್ರೇರಣೆಯಿಂದ ಯಕ್ಷಗಾನದತ್ತ ಆಕರ್ಷಿತರಾಗಿದ್ದರು. ತಂದೆ ಬಂಟ್ವಾಳ ಗಣಪತಿ ಆಚಾರ್ಯ ಕೂಡ ಕಲಾವಿದರಾಗಿದ್ದು, ವಿವಿಧ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು. ಸಣ್ಣಂದಿನಲ್ಲೇ ಯಕ್ಷಗಾನ, ತಾಳಮದ್ದಳೆಗಳನ್ನು ನೋಡುತ್ತಾ ಬೆಳೆದಿದ್ದ ಜಯರಾಮ ಆಚಾರ್ಯರು ತಂದೆಯವರ ಜತೆ ಯಕ್ಷಗಾನ ಪ್ರದರ್ಶನಗಳಿಗೆ ಹೋಗಿ‌ ಆಸಕ್ತಿ ಬೆಳೆಸಿಕೊಂಡಿದ್ದರು. ನಾಟ್ಯಾಭ್ಯಾಸ ಮಾಡುವ ಮೊದಲೇ ಒಂದಷ್ಟು ಮೇಳಗಳಲ್ಲಿ ಸೇವೆ ಸಲ್ಲಿಸಿರುವುದು ಅವರ ಹೆಗ್ಗಳಿಕೆಯಾಗಿದೆ.

ಬಳಿಕ ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನು ಮಾಡತೊಡಗಿದ್ದರು.
ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸಲ್ಪಡುತ್ತಿದ್ದ `ಲಲಿತ ಕಲಾ ಕೇಂದ್ರ’ಕ್ಕೆ ಸೇರಿ ಯಕ್ಷಗಾನ ಹೆಜ್ಜೆಗಾರಿಕೆ ಕಲಿತಿದ್ದರು. ಅದಾದ ಬಳಿಕ ಕಟೀಲು ಮೇಳದಲ್ಲಿ ನಾಲ್ಕು ವರ್ಷ, ಪುತ್ತೂರು ಮೇಳ, ಕದ್ರಿ ಮೇಳ, ಕುಂಬಳೆ ಮೇಳದಲ್ಲೂ ಯಕ್ಷಗಾನ ತಿರುಗಾಟ ನಡೆಸಿದರು. 

ಸುದೀರ್ಘ ಅವಧಿಗೆ ಕಟೀಲು ಮೇಳ, ಎಡನೀರು ಮೇಳ, ಹೊಸನಗರ ಮೇಳ, ತನ್ನ ಇಳಿ ವಯಸ್ಸಿನಲ್ಲಿ ಹನುಮಗಿರಿ ಮೇಳದಲ್ಲೂ ಹಾಸ್ಯಗಾರನಾಗಿ ನಗಿಸಿದ್ದರು. ಸುಮಾರು 50 ವರ್ಷಗಳ ಯಕ್ಷಗಾನ ತಿರುಗಾಟದಲ್ಲಿ ಹಾಸ್ಯಗಾರ ಪಾತ್ರವಲ್ಲದೆ, ಅಗತ್ಯ ಬಿದ್ದರೆ ಇತರ ಪಾತ್ರಗಳನ್ನೂ ಅವರು ನಿರ್ವಹಿಸಿದ್ದಾರೆ. ಜಯರಾಮ ಆಚಾರ್ಯರ ನಿಧನಕ್ಕೆ ಯಕ್ಷಗಾನ ದಿಗ್ಗಜರು, ಕಲಾಭಿಮಾನಿಗಳು, ಸಮಾಜದ ಗಣ್ಯರು ಕಂಬನಿ ಮಿಡಿದಿದ್ದಾರೆ. 

ಅವರಿಗೆ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಸಂದಿವೆ. ಅವರು ಪತ್ನಿ, ಪುತ್ರಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅವರಿಗೆ ಕಡಬದ್ವಯರ ಸಂಸ್ಕರಣಾ ಪ್ರಶಸ್ತಿ ಘೋಷಣೆಯಾಗಿದ್ದು, ಅ. 27ರಂದು ಅವರು ಪ್ರಶಸ್ತಿ ಸ್ವೀಕರಿಸಬೇಕಿತ್ತು. ಯಕ್ಷಗಾನದ ಜತೆಗೆ ರಂಗಭೂಮಿ, ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದರು.

Mangalore Well-known Yakshagana comedy actor Bantwal Jayaram Acharya passed away in Bengaluru on October 21. He was 67. He is survived by his wife, a daughter and a son.