ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಿಐಡಿ ಎಂಟ್ರಿ ; ಮೂರು ಕೇಸುಗಳ ತನಿಖೆಯೂ ಅಪರಾಧ ತನಿಖಾ ದಳಕ್ಕೆ

10-11-26 11:53 am       HK News Staffer   ಕರಾವಳಿ

ಕರಾವಳಿಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರದೀಪ್ ಪೂಜಾರಿ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (CID)ಕ್ಕೆ ವರ್ಗಾಯಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಮುಂದೆ ಈ ಮೂರು ಪ್ರಕರಣಗಳ ತನಿಖೆಯನ್ನೂ ಸಿಐಡಿ ಅಧಿಕಾರಿಗಳು ಕೈಗೆತ್ತಿಕೊಳ್ಳಲಿದ್ದಾರೆ.

ಉಡುಪಿ, ನವೆಂಬರ್ 10:  ಕರಾವಳಿಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ಪ್ರದೀಪ್ ಪೂಜಾರಿ ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರತ್ಯೇಕ ಪ್ರಕರಣಗಳ ತನಿಖೆಯನ್ನು ರಾಜ್ಯ ಅಪರಾಧ ತನಿಖಾ ದಳ (CID)ಕ್ಕೆ ವರ್ಗಾಯಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಇನ್ನು ಮುಂದೆ ಈ ಮೂರು ಪ್ರಕರಣಗಳ ತನಿಖೆಯನ್ನೂ ಸಿಐಡಿ ಅಧಿಕಾರಿಗಳು ಕೈಗೆತ್ತಿಕೊಳ್ಳಲಿದ್ದಾರೆ.

ಈ ಕುರಿತು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ. ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾನಿರೀಕ್ಷಕರು (DG ಮತ್ತು IGP) ಮೂರು ಪ್ರಕರಣಗಳ ತನಿಖೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿಗೆ ವಹಿಸಲು ಆದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ಸಿಐಡಿಗೆ ವರ್ಗಾವಣೆಯಾಗಿರುವ ಮೊದಲ ಪ್ರಕರಣ ಅಕ್ಟೋಬರ್ 27ರಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ್ದ ದೂರು, ಪ್ರದೀಪ್ ಪೂಜಾರಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ತಾನು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ತನ್ನ ಜೀವಕ್ಕೆ ಅಪಾಯ ಉಂಟು ಮಾಡುವ ಪ್ರಯತ್ನ ನಡೆದಿದೆ ಎಂದು ಸಂತ್ರಸ್ತೆ ಆರೋಪಿಸಿದ್ದರು.

ಎರಡನೇ ಪ್ರಕರಣವನ್ನು ಪ್ರದೀಪ್ ಅವರ ಸಹೋದರ ದಿಲೀಪ್ ಅವರು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಸಂತ್ರಸ್ತೆಯ ಸಹೋದರರಾದ ಸುಧೀರ್ ಮತ್ತು ಶೈಲೇಶ್, ಕೃಷ್ಣ ನಾಯಕ್, ಸಂಜಯ್ ಕುಲಾಲ್ ಹಾಗೂ ಹೊರ ರಾಜ್ಯದ ಇಬ್ಬರು ಕಾರ್ಮಿಕರು ಬ್ರಿಝಾ ಕಾರಿನಲ್ಲಿ ಪ್ರದೀಪ್ ಅವರನ್ನು ಅಪಹರಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಮೂರನೇ ಪ್ರಕರಣ ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆಗೆ ಸಂಬಂಧಿಸಿದೆ. ಅಕ್ಟೋಬರ್ 30ರಂದು ಅಜ್ಜರಕಾಡಿನ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯ ಬಳಿಕ ಅವರ ಸಹೋದರ ದಿಲೀಪ್ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಂತ್ರಸ್ತೆ ಸೇರಿದಂತೆ ಒಟ್ಟು ಒಂಬತ್ತು ಮಂದಿ ತನ್ನ ಸಹೋದರನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂಬುದು ದಿಲೀಪ್ ಅವರ ದೂರಿನಲ್ಲಿರುವ ಆರೋಪವಾಗಿದೆ.

ಒಂದೆಡೆ ಜೀವ ಬೆದರಿಕೆ ಮತ್ತು ಅಪಹರಣದ ಆರೋಪಗಳಿದ್ದರೆ, ಮತ್ತೊಂದೆಡೆ ಪ್ರದೀಪ್ ಪೂಜಾರಿ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂಬ ದೂರು ದಾಖಲಾಗಿದೆ. ಹೀಗೆ ಪರಸ್ಪರ ಆರೋಪ-ಪ್ರತ್ಯಾರೋಪಗಳ ನಡುವೆ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಂಡಿದೆ. ಇದೀಗ ಮೂರೂ ಪ್ರಕರಣಗಳು ಸಿಐಡಿ ತನಿಖೆಗೆ ವರ್ಗಾವಣೆಯಾಗಿರುವುದರಿಂದ ಮುಂದಿನ ತನಿಖೆಯತ್ತ ಎಲ್ಲರ ಗಮನ ನೆಟ್ಟಿದೆ.