ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಬಿಲ್ ; ನೋಡಲ್ ಅಧಿಕಾರಿಗಳೇ ಹೊಣೆ ! ಜಿಲ್ಲಾಧಿಕಾರಿ ಸುಮ್ಮನಿರುವಂತಿಲ್ಲ !

10-06-21 12:28 pm       Mangalore Correspondent   ಕರಾವಳಿ

ಕೋವಿಡ್ ಸೋಂಕಿತರಿಂದ ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿದ ಚಿಕಿತ್ಸಾ ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.  

ಮಂಗಳೂರು, ಜೂ.10 : ಕೋವಿಡ್ ಸೋಂಕಿತರಿಂದ ಖಾಸಗಿ ಆಸ್ಪತ್ರೆಗಳು ಸರಕಾರ ನಿಗದಿಪಡಿಸಿದ ಚಿಕಿತ್ಸಾ ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು. ಅದಕ್ಕಿಂತ ಹೆಚ್ಚಿನ ದರ ವಸೂಲಿ ಮಾಡಿದ ಆರೋಪ ಕೇಳಿಬಂದರೆ ತಕ್ಷಣ ಅಧಿಕಾರಿಗಳು ಮಧ್ಯಪ್ರವೇಶ ಮಾಡಿ ಬಗೆಹರಿಸಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ.  

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಕೋವಿಡ್ ರೋಗಿಗಳ ಬಿಲ್‌ ಸಂಬಂಧಿಸಿ ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ ಸಂದರ್ಭ ಸರಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಶುಲ್ಕವನ್ನು ಪಡೆಯುತ್ತಿರುವ ಬಗ್ಗೆ ದೂರು ಕೇಳಿಬರುತ್ತಿವೆ. ಹೆಚ್ಚಿನ ಶುಲ್ಕ ಪಡೆಯದಂತೆ ಖಾಸಗಿ ಆಸ್ಪತ್ರೆಗಳ ಉಸ್ತುವಾರಿ ನೋಡಲ್ ಅಧಿಕಾರಿಗಳು ಜವಾಬ್ದಾರಿಯಿಂದ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಈ ಬಗ್ಗೆ ಕೆಲವು ನೋಡಲ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ಲಕ್ಷಿಸುತ್ತಿರುವ ಬಗ್ಗೆ ದೂರುಗಳಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ನೋಡಲ್ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಇದಲ್ಲದೆ ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಬರುವ ರೋಗಿಗಳಿಂದ ಯಾವುದೇ ರೀತಿ ಮುಂಗಡ ಹಣವನ್ನು ಪಡೆಯುವಂತಿಲ್ಲ ಎಂದ ಸಚಿವರು ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆಗಳನ್ನು ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ರೆಫರ್ ಮಾಡುವ ರೋಗಿಗಳ ಚಿಕಿತ್ಸೆಗಾಗಿ ಕಾಯ್ದಿರಿಸುವುದು ಕಡ್ಡಾಯವಾಗಿದೆ. ಅದನ್ನು ಉಲ್ಲಂಘಿಸಿದ್ದಲ್ಲಿ ಕೆ.ಪಿ.ಎಂ.ಇ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸರ್ಕಾರ ಕಾರ್ಯಪಡೆ ಸಮಿತಿಯ ವರದಿಯನ್ನು ಆಧರಿಸಿ ಕೋವಿಡ್ ಚಿಕಿತ್ಸೆಯ ಪ್ಯಾಕೇಜ್ ದರವನ್ನು ನಿಗದಿಪಡಿಸಿದೆ. ಅಂದರೆ ಸಿಟಿ ಸ್ಕ್ಯಾನಿಂಗ್‌ಗೆ ಬಿಪಿಎಲ್ ಕಾರ್ಡ್ ಹೊಂದಿದವರಿಂದ 1,500 ರೂ, ಇತರರಿಂದ 2,500 ರೂ. ಹಾಗೂ ಎಕ್ಸ್-ರೇಗೆ 250 ರೂ. ಶುಲ್ಕ ಪಡೆಯಬಹುದಾಗಿದೆ. ಖಾಸಗಿ ಆಸ್ಪತ್ರೆಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಯಿಂದ ರೆಫರ್ ಮಾಡಿದ ಆಯುಷ್ಮಾನ್ ಕಾರ್ಡ್ ಹೊಂದಿರುವ ಕೋವಿಡ್ ರೋಗಿಗಳ ಒಂದು ದಿನದ ಚಿಕಿತ್ಸೆಗೆ ಜನರಲ್ ವಾರ್ಡ್‌ಗೆ 5,200 ರೂ., ಎಚ್‌ಡಿಯು ಗೆ 7,000 ರೂ., ಐಸಿಯು ವೆಂಟಿಲೇಟರ್ ರಹಿತ ಚಿಕಿತ್ಸೆಗೆ 8,500 ರೂ, ಐಸಿಯು ವೆಂಟಿಲೇಟರ್ ಸಹಿತ ಚಿಕಿತ್ಸೆಗೆ 10,000 ರೂ.ಗಳನ್ನು ಪಿಪಿಇ ಹಾಗೂ ಇತರ  ವಸ್ತುಗಳನ್ನು ಒಳಗೊಂಡು ಪಡೆಯಬೇಕು ಎಂದರು. 

ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ ಖಾಸಗಿ ಆಸ್ಪತ್ರೆಗಳ ಬಿಲ್‌ಗಳ ಪರಿಶೀಲನೆಗೆ ಜಿಲ್ಲಾಡಳಿತ ಆಡಿಟ್ ತಂಡವನ್ನು ರಚಿಸಿದೆ. ಈ ತಂಡವು ಖಾಸಗಿ ಆಸ್ಪತ್ರೆಗಳ ಬಿಲ್‌ ಆಡಿಟ್ ಮಾಡಿ ಜಿಲ್ಲಾಡಳಿತಕ್ಕೆ ವರದಿ ನೀಡಲಿದೆ. ಈವರೆಗೆ 11 ಖಾಸಗಿ ಆಸ್ಪತ್ರೆಯ 896 ಕೋವಿಡ್ ರೋಗಿಗಳ ಚಿಕಿತ್ಸಾ ಬಿಲ್‌ಗಳನ್ನು ಪರಿಶೀಲಿಸಿದೆ ಎಂದರು.

ನೋಡಲ್ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ತಮಗೆ ವಹಿಸಿರುವ ಕಾರ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ, ದ.ಕ. ಜಿಪಂ ಸಿಇಒ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಪ್ರಜ್ಞಾ ಅಮ್ಮೆಂಬಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

District in-charge minister Kota Srinivas Poojary said that private hospitals have to collect Covid19 treatment charges only as per the amounts already fixed by the state government. He asked the officials to ensure that the hospitals reimburse the amount recovered in excess already if any.