ಮಂಗಳೂರಿನಿಂದ ಕಾಸರಗೋಡಿಗೆ ಏಳು ದಿನ ಬಸ್ ಸಂಚಾರ ಸ್ಥಗಿತ ; ಜಿಲ್ಲಾಡಳಿತ ನಿರ್ಧಾರ

31-07-21 10:02 pm       Mangaluru Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. 

ಮಂಗಳೂರು, ಜುಲೈ 31: ನೆರೆಯ ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. 

ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 
 
ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್, ಕೊರೊನಾ ಪಾಸಿಟಿವಿಟಿ ಪ್ರಕರಣ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದು, ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಆಗಸ್ಟ್ 1 ರಿಂದ ಏಳು ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್‍ಗಳ ಸಂಚಾರವನ್ನು ನಿಲ್ಲಿಸಬೇಕು ಎಂದು ಸೂಚನೆ ನೀಡಿದರು. 

ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ತಪಾಸಣೆಗೆ ಕ್ರಮ ಕೈಗೊಳ್ಳಬೇಕು, ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‍ಗಳಿಗೆ ದಾಖಲಿಸಬೇಕು,  ಸೋಂಕಿತರು ಅನಗತ್ಯವಾಗಿ ಓಡಾಡುವುದು ಕಂಡುಬಂದಲ್ಲಿ ಅಂಥವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು. ಒಂದೇ ಕುಟುಂಬದಲ್ಲಿ 2 ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಪರಿಗಣಿಸಬೇಕು ಎಂದರು.

ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಲ್ಲಿ ಕಲ್ಯಾಣ ಮಂಟಪಗಳ ಮಾಲೀಕರ ಮೇಲೆ ಎಫ್.ಐ.ಆರ್ ದಾಖಲಿಸುವಂತೆ ತಿಳಿಸಿದ ಅವರು, ಇದರ ಬಗ್ಗೆ ನಿಗಾ ವಹಿಸಲು ಹೋಂ ಗಾರ್ಡ್ ಅನ್ನು ನಿಯೋಜಿಸಬೇಕು ಎಂದರು.

ಕೋವಿಡ್ ಸೋಂಕಿತರು ಹೋಂ ಕ್ವಾರಂಟೈನ್‍ನಲ್ಲಿ ಇರುವ ಬಗ್ಗೆ ಸಂಬಂಧಿಸಿದ  ತಹಶೀಲ್ದಾರ್‍ಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಬೇಕು, ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತಹ ಸ್ಥಳಗಳಲ್ಲಿ ಜನಸಂದಣಿ ಕಂಡುಬರುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ.60 ಆನ್‍ಲೈನ್ ರಿಜಿಸ್ರ್ಟೇಷನ್ ಮತ್ತು ಶೇ.40 ನೇರವಾಗಿ ಹಾಗೂ 18 ವರ್ಷ ಮೇಲ್ಟಟ್ಟವರಿಗೆ ಶೇ. 80 ಆನ್‍ಲೈನ್  ರಿಜಿಸ್ರ್ಟೇಷನ್ ಮತ್ತು ಶೇ. 20 ನೇರವಾಗಿ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದರು.

ಮಹಾನಗರಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಷ್ ಭಗವಾನ್ ಸೋನಾವಣೆ ಹಾಗೂ ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವೇದಿಕೆಯಲ್ಲಿದ್ದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಉಪವಿಭಾಗಾಧಿಕಾರಿ, ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.

Mangalore Kasaragod Bus services suspended for 7 days Mangalore DC. Kerala reported 20,624 new Covid cases and 80 deaths in the last 24 hours, according to a health bulletin on Saturday. Presently, the positivity rate stands at 12.31%. The state reported 16,865 recoveries during the same period. With this, the active cases in Kerala have now gone up to 1,64,500